ಕೆಲಸ ಮುಗಿಸದೆ ಬಿಲ್ ಪಡೆಯುತ್ತಿರುವ ಗುತ್ತಿಗೆದಾರರು – ಗ್ರಾಮಸ್ಥರಿಗೆ ನೀರು ಸಿಗುತ್ತಿಲ್ಲ ಎಂಬ ಆರೋಪ
Hosanagara :ಜಲಜೀವನ್ ಮಿಷನ್ (JJM) ಯೋಜನೆಯಡಿ ಎಂ.ಗುಡ್ಡೆಕೊಪ್ಪ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕುಡಿಯುವ ನೀರು ಪೂರೈಕೆ ಕಾಮಗಾರಿಗಳಲ್ಲಿ ಭಾರೀ ಅವ್ಯವಸ್ಥೆ ನಡೆಯುತ್ತಿದೆ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಜಿ. ಎನ್. ಗಂಭೀರ ಆರೋಪ ಮಾಡಿದ್ದಾರೆ.

ಟೆಂಡರ್ ಪಡೆದ ಗುತ್ತಿಗೆದಾರರು ಕಾಮಗಾರಿಗಳನ್ನು ಪೂರ್ಣಗೊಳಿಸದೇ ಬಿಲ್ ಪಡೆದುಕೊಳ್ಳುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಇಂಜಿನಿಯರ್‌ಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಇದರ ಪರಿಣಾಮವಾಗಿ ಗ್ರಾಮಸ್ಥರಿಗೆ ಮೂಲಭೂತ ಕುಡಿಯುವ ನೀರು ಸೌಲಭ್ಯವೇ ಲಭ್ಯವಾಗುತ್ತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.


ಈ ಅವ್ಯವಸ್ಥೆಯ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು. ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಗಳ ಗುಣಮಟ್ಟ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಪ್ರವೀಣ್ ಜಿ. ಎನ್. ಮನವಿ ಮಾಡಿದ್ದಾರೆ.

15 ದಿನಗಳೊಳಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ನೀಡಿ ಲೋಪಗಳನ್ನು ಸರಿಪಡಿಸದಿದ್ದರೆ, ಇಲಾಖೆ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಗ್ರಾಮ ಪಂಚಾಯತ್ ವ್ಯಾಪ್ತಿಯ ಸಾರ್ವಜನಿಕರು ಕೂಡ ಈ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಯೋಜನೆಯ ಉದ್ದೇಶವೇ ವಿಫಲವಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.







