ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಸ್
ನೆಲಮಂಗಲ: ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್ಸೊಂದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಬೆಂಗಳೂರಿನಿಂದ ಕಲಬುರಗಿಗೆ ತೆರಳುತ್ತಿದ್ದ ‘ಸಂಜನಾ ಟ್ರಾವೆಲ್ಸ್’ ಸಂಸ್ಥೆಗೆ ಸೇರಿದ ಬಸ್ ನೆಲಮಂಗಲ ತಾಲೂಕಿನ ಹನುಮಂತಪುರ ಗೇಟ್ ಸಮೀಪ ಅಪಘಾತಕ್ಕೀಡಾಗಿದೆ.


ಶುಕ್ರವಾರ ಮುಂಜಾನೆ ಬೆಂಗಳೂರಿನಿಂದ ಕಲಬುರಗಿ ಕಡೆಗೆ ಪ್ರಯಾಣಿಕರನ್ನು ಹೊತ್ತು ಸಾಗುತ್ತಿದ್ದ ಬಸ್, ಹನುಮಂತಪುರ ಗೇಟ್ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.
ಕ್ಷಣಾರ್ಧದಲ್ಲಿ ಬಸ್ ತುಂಬಾ ಬೆಂಕಿ ವ್ಯಾಪಿಸಿದ್ದು, ಸ್ಥಳೀಯರು ಹಾಗೂ ಪ್ರಯಾಣಿಕರಲ್ಲಿ ಆತಂಕ ಮನೆ ಮಾಡಿತ್ತು. ಅದೃಷ್ಟವಶಾತ್, ಬಸ್ಸಿನಲ್ಲಿ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಎಚ್ಚೆತ್ತ ಪ್ರಯಾಣಿಕರು ಕೂಡಲೇ ಕೆಳಗಿಳಿದಿದ್ದರಿಂದ ದೊಡ್ಡ ಮಟ್ಟದ ಪ್ರಾಣಾಪಾಯ ತಪ್ಪಿದೆ ಎಂದು ತಿಳಿದುಬಂದಿದೆ.
ಘಟನೆ ನಡೆದ ತಕ್ಷಣ ಸ್ಥಳೀಯರು ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು. ಆದರೆ ಅಷ್ಟರಲ್ಲಾಗಲೇ ಬಸ್ ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿದೆ.
ಅಪಘಾತದ ಹಿನ್ನೆಲೆಯಲ್ಲಿ ತುಮಕೂರು-ಬೆಂಗಳೂರು ಹೆದ್ದಾರಿಯಲ್ಲಿ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಸ್ಸಿನಲ್ಲಿ ಎಷ್ಟು ಮಂದಿ ಪ್ರಯಾಣಿಕರಿದ್ದರು ಮತ್ತು ಗಾಯಾಳುಗಳ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.








