ಹೊಸನಗರ ಬಸ್ ನಿಲ್ದಾಣದಲ್ಲಿ ಆತಂಕ; ಸಂತಾನಹರಣಕ್ಕೆ ಸರ್ಕಾರದ ಆದೇಶವಿದ್ದರೂ ಕ್ರಮ ಕೈಗೊಳ್ಳದಿರುವುದೇಕೆ?

ಹೊಸನಗರ: ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದ್ದು, ಸಾರ್ವಜನಿಕರು ಹಾಗೂ ಪ್ರಯಾಣಿಕರು ಜೀವಭಯದಲ್ಲಿ ಓಡಾಡುವಂತಾಗಿದೆ. ಇದರ ಬೆನ್ನಲ್ಲೇ ಶುಕ್ರವಾರ ಹೊಸನಗರ ಬಸ್ ನಿಲ್ದಾಣದ ಸುತ್ತಮುತ್ತ ಹುಚ್ಚು ನಾಯಿಯೊಂದು ದಾಳಿ ನಡೆಸಿ, ಒಂದೇ ದಿನ ಐದಾರು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಆತಂಕಕಾರಿ ಘಟನೆ ನಡೆದಿದೆ.

ನಾಯಿ ಕಡಿತಕ್ಕೊಳಗಾದವರು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದು, ಘಟನೆಯಿಂದ ಬಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಮಾಧ್ಯಮ ವರದಿಗೂ ಸ್ಪಂದಿಸದ ಅಧಿಕಾರಿಗಳು
ಹೊಸನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿರುವ ಕುರಿತು ಸ್ಥಳೀಯ ಮಾಧ್ಯಮಗಳು ಹಲವು ಬಾರಿ ವರದಿ ಪ್ರಕಟಿಸಿ, ಪಟ್ಟಣ ಪಂಚಾಯಿತಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದವು. ಆದರೂ ಸಮಸ್ಯೆ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪ ಸಾರ್ವಜನಿಕರಿಂದ ಕೇಳಿಬಂದಿದೆ.
ಮಾಧ್ಯಮಗಳ ಮೂಲಕ ಸಮಸ್ಯೆ ಹಲವು ಬಾರಿ ಬೆಳಕಿಗೆ ಬಂದಿದ್ದರೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ವಹಿಸಿರುವುದೇ ಇಂತಹ ಪರಿಸ್ಥಿತಿಗೆ ಕಾರಣವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸರ್ಕಾರದ ಆದೇಶವಿದ್ದರೂ ನಾಯಿಗಳ ಸಂತಾನಹರಣಕ್ಕೆ ಕ್ರಮವಿಲ್ಲ?
ಬೀದಿ ನಾಯಿಗಳ ಸಂಖ್ಯೆಯನ್ನು ನಿಯಂತ್ರಿಸುವ ಉದ್ದೇಶದಿಂದ ನಾಯಿಗಳ ಸಂತಾನಹರಣ ಶಸ್ತ್ರಚಿಕಿತ್ಸೆ (Animal Birth Control) ಕೈಗೊಳ್ಳಲು ಈ ಹಿಂದೆ ಸರ್ಕಾರದಿಂದ ಪಶು ಇಲಾಖೆಗೆ ಆದೇಶ ಹಾಗೂ ಸೂಚನೆ ನೀಡಲಾಗಿತ್ತು. ಆದರೆ ಹೊಸನಗರ ಪಟ್ಟಣ ಪಂಚಾಯಿತಿ ಹಾಗೂ ಪಶು ಇಲಾಖೆ ವತಿಯಿಂದ ಈವರೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಆರೋಪ ಕೇಳಿಬಂದಿದೆ.
ಬೀದಿ ನಾಯಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದು ಅಧಿಕಾರಿಗಳ ಗಮನಕ್ಕೆ ಬಂದಿದ್ದರೂ, ಸಂತಾನಹರಣ ಸೇರಿದಂತೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳದಿರುವುದು ಸಾರ್ವಜನಿಕರ ಸುರಕ್ಷತೆಯನ್ನೇ ಪ್ರಶ್ನಿಸುವಂತಾಗಿದೆ..
ವಿಶೇಷವಾಗಿ ಹೊಸನಗರ ಪಶು ಇಲಾಖೆಯ ಸಹಾಯಕ ನಿರ್ದೇಶಕರು (AD) ಈ ವಿಚಾರದಲ್ಲಿ ಅಗತ್ಯ ಗಮನ ಹರಿಸದೆ ಇರುವುದೇಕೆ ಎಂಬ ಪ್ರಶ್ನೆ ಇದೀಗ ಸಾರ್ವಜನಿಕ ವಲಯದಲ್ಲಿ ಎದ್ದಿದೆ. ಸರ್ಕಾರದಿಂದಲೇ ಕ್ರಮ ಕೈಗೊಳ್ಳಲು ಆದೇಶವಿದ್ದರೂ ಸ್ಥಳೀಯ ಮಟ್ಟದಲ್ಲಿ ಅದರ ಅನುಷ್ಠಾನವಾಗದಿರುವುದಕ್ಕೆ ಕಾರಣವೇನು ಎಂಬುದನ್ನು ಸಂಬಂಧಪಟ್ಟ ಅಧಿಕಾರಿಗಳು ಸ್ಪಷ್ಟಪಡಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಬಸ್ ನಿಲ್ದಾಣವೇ ಬೀದಿ ನಾಯಿಗಳ ಅಡ್ಡೆ?
ಹೊಸನಗರ ಬಸ್ ನಿಲ್ದಾಣದ ಆವರಣದಲ್ಲಿ ಕೆಲವರು ಬೀದಿ ನಾಯಿಗಳಿಗೆ ಬಿಸ್ಕೆಟ್ ಸೇರಿದಂತೆ ವಿವಿಧ ಆಹಾರ ಪದಾರ್ಥಗಳನ್ನು ನೀಡುತ್ತಿರುವುದರಿಂದ ನಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಅಲ್ಲಿಯೇ ನೆಲೆಸುತ್ತಿವೆ ಎಂಬ ಆರೋಪವೂ ಕೇಳಿಬಂದಿದೆ.
ಬಸ್ ನಿಲ್ದಾಣದಂತಹ ಜನನಿಬಿಡ ಸಾರ್ವಜನಿಕ ಪ್ರದೇಶದಲ್ಲಿ ನಾಯಿಗಳಿಗೆ ನಿರಂತರವಾಗಿ ಆಹಾರ ನೀಡುತ್ತಿರುವುದರಿಂದ ಅವುಗಳ ಸಂಖ್ಯೆ ಹಾಗೂ ಉಪದ್ರವ ಹೆಚ್ಚಾಗಿದೆ ಎಂದು ಸ್ಥಳೀಯರು ಹಾಗೂ ವ್ಯಾಪಾರಿಗಳು ಆರೋಪಿಸಿದ್ದಾರೆ. ಈ ಕುರಿತು ಹಲವು ಬಾರಿ ಮನವಿ ಮಾಡಿದ್ದರೂ ಪಟ್ಟಣ ಪಂಚಾಯಿತಿ ಆಡಳಿತ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಅವರು ದೂರಿದ್ದಾರೆ.
ತಮ್ಮ ಮನೆ ಅಥವಾ ಖಾಸಗಿ ಸ್ಥಳದಲ್ಲಿ ಪ್ರಾಣಿಗಳಿಗೆ ಆಹಾರ ನೀಡುವುದಕ್ಕೂ ಸಾರ್ವಜನಿಕರು ವಿರೋಧ ವ್ಯಕ್ತಪಡಿಸುತ್ತಿಲ್ಲ. ಆದರೆ ನೂರಾರು ಜನರು ಓಡಾಡುವ ಬಸ್ ನಿಲ್ದಾಣದ ಆವರಣದಲ್ಲಿ ಬೀದಿ ನಾಯಿಗಳ ಗುಂಪು ಸೇರಲು ಕಾರಣವಾಗುವ ರೀತಿಯಲ್ಲಿ ಆಹಾರ ನೀಡುವುದರಿಂದ ಪ್ರಯಾಣಿಕರ ಸುರಕ್ಷತೆಗೆ ಸಮಸ್ಯೆಯಾಗುತ್ತಿದೆ. ಈ ಬಗ್ಗೆ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ
ಐದಾರು ಮಂದಿಗೆ ನಾಯಿ ಕಡಿತ; ತಕ್ಷಣ ಕ್ರಮಕ್ಕೆ ಆಗ್ರಹ
ಶುಕ್ರವಾರ ಹುಚ್ಚು ನಾಯಿ ದಾಳಿಗೆ ಒಳಗಾಗಿ ಐದಾರು ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ನಂತರವಾದರೂ ಪಟ್ಟಣ ಪಂಚಾಯಿತಿ ಹಾಗೂ ಪಶು ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ನಾಯಿ ಕಡಿತಕ್ಕೊಳಗಾದವರಿಗೆ ಸರ್ಕಾರದ ನಿಯಮಾನುಸಾರ ಸೂಕ್ತ ಪರಿಹಾರ ಹಾಗೂ ಅಗತ್ಯ ವೈದ್ಯಕೀಯ ನೆರವು ಒದಗಿಸಬೇಕು. ಬೀದಿ ನಾಯಿಗಳ ಸಂತಾನಹರಣ, ನಿಯಂತ್ರಣ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಅವುಗಳ ಹಾವಳಿ ತಡೆಯಲು ಸಮಗ್ರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ಸಾರ್ವಜನಿಕರ ಸುರಕ್ಷತೆಗೆ ಸಂಬಂಧಿಸಿದ ಈ ಗಂಭೀರ ಸಮಸ್ಯೆ ಹಲವು ದಿನಗಳಿಂದ ಅಧಿಕಾರಿಗಳ ಗಮನದಲ್ಲಿದ್ದರೂ ಕ್ರಮ ಕೈಗೊಳ್ಳದಿರುವುದು ಏಕೆ? ಸರ್ಕಾರದ ಆದೇಶದ ಹೊರತಾಗಿಯೂ ಸಂತಾನಹರಣ ಕಾರ್ಯವನ್ನು ಅನುಷ್ಠಾನಗೊಳಿಸದಿರುವುದಕ್ಕೆ ಕಾರಣವೇನು? ಹೊಸನಗರ ಪಶು ಇಲಾಖೆಯ AD ಹಾಗೂ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಈ ಬಗ್ಗೆ ಯಾವ ಕ್ರಮ ಕೈಗೊಂಡಿದ್ದಾರೆ? ಎಂಬ ಪ್ರಶ್ನೆಗಳಿಗೆ ಅಧಿಕಾರಿಗಳು ಉತ್ತರ ನೀಡಬೇಕಿದೆ.ಇನ್ನಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಪರಿಣಾಮಕಾರಿ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಬೀದಿ ನಾಯಿಗಳ ಹಾವಳಿಯಿಂದ ಮತ್ತಷ್ಟು ಅನಾಹುತ ಸಂಭವಿಸುವ ಆತಂಕವನ್ನು ಸಾರ್ವಜನಿಕರು ವ್ಯಕ್ತಪಡಿಸಿದ್ದಾರೆ.
ಬರಹ: Chetandas Hosamane









