ನಾಲ್ಕು ಬಾರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆ, ಮಾಜಿ ಅಧ್ಯಕ್ಷರ ಮುಂದಿನ ರಾಜಕೀಯ ನಡೆ ಬಗ್ಗೆ ಕುತೂಹಲ

ಹೊಸನಗರ: ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳ ಕರಡು ಮೀಸಲಾತಿ ಪ್ರಕಟಗೊಂಡ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ವಿವಿಧ ಪಕ್ಷಗಳ ಆಕಾಂಕ್ಷಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಚುನಾವಣಾ ಸಿದ್ಧತೆ ಆರಂಭಿಸಿದ್ದಾರೆ. ಆದರೆ, ಪಂಚಾಯತ್ ರಾಜ್ ವ್ಯವಸ್ಥೆಯಲ್ಲಿ ಸತತ ನಾಲ್ಕು ಬಾರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿರುವ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ್ ಅವರ ಮುಂದಿನ ರಾಜಕೀಯ ನಡೆ ಮಾತ್ರ ಇನ್ನೂ ನಿಗೂಢವಾಗಿದ್ದು, ಹೊಸನಗರ ಭಾಗದಲ್ಲಿ ಕುತೂಹಲ ಮೂಡಿಸಿದೆ.

ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಯ ಕರಡು ಮೀಸಲಾತಿ ಪ್ರಕಟಗೊಂಡಿದ್ದು, ಆಕ್ಷೇಪಣೆ ಸಲ್ಲಿಸಲು 10 ದಿನಗಳ ಕಾಲಾವಕಾಶ ನೀಡಲಾಗಿದೆ. ಮೀಸಲಾತಿ ಪ್ರಕಟವಾಗುತ್ತಿದ್ದಂತೆಯೇ ಚುನಾವಣಾ ಆಕಾಂಕ್ಷಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಬಿರುಸಿನ ಪ್ರಚಾರ ಹಾಗೂ ಜನಸಂಪರ್ಕ ಕಾರ್ಯಕ್ಕೆ ಮುಂದಾಗಿದ್ದಾರೆ.
ಈ ನಡುವೆ, ಸತತ ನಾಲ್ಕು ಬಾರಿ ಜಿಲ್ಲಾ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗುವುದರ ಜತೆಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿರುವ ಕಲಗೋಡು ರತ್ನಾಕರ್ ಅವರು ಈ ಬಾರಿ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಪ್ರಶ್ನೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ರತ್ನಾಕರ್ ಅವರು ರಿಪ್ಪನ್ಪೇಟೆ ಅಥವಾ ಹೊಸನಗರ (ಕಸಬಾ) ಜಿಲ್ಲಾ ಪಂಚಾಯತ್ ಕ್ಷೇತ್ರದಿಂದ ಸ್ಪರ್ಧಿಸಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ, ಪ್ರಕಟಗೊಂಡಿರುವ ಕರಡು ಮೀಸಲಾತಿಯ ಪ್ರಕಾರ ರಿಪ್ಪನ್ಪೇಟೆ ಕ್ಷೇತ್ರವು ಪರಿಶಿಷ್ಟ ಜಾತಿಗೆ ಹಾಗೂ ಹೊಸನಗರ (ಕಸಬಾ) ಕ್ಷೇತ್ರವು ಸಾಮಾನ್ಯ ಮಹಿಳೆಗೆ ಮೀಸಲಾಗಿರುವುದರಿಂದ ಅವರ ಸ್ಪರ್ಧೆಯ ಕ್ಷೇತ್ರದ ಬಗ್ಗೆ ಅನಿಶ್ಚಿತತೆ ಮುಂದುವರಿದಿದೆ.
ಇದೀಗ ಹುಂಚ ಹಾಗೂ ಕುಂಸಿ ಜಿಲ್ಲಾ ಪಂಚಾಯತ್ ಕ್ಷೇತ್ರಗಳು ಹಿಂದುಳಿದ ವರ್ಗ ‘ಎ’ಗೆ ಮೀಸಲಾಗಿರುವ ಹಿನ್ನೆಲೆಯಲ್ಲಿ, ಈ ಎರಡು ಕ್ಷೇತ್ರಗಳಲ್ಲಿ ಯಾವುದಾದರೂ ಒಂದನ್ನು ರತ್ನಾಕರ್ ಆಯ್ಕೆ ಮಾಡಿಕೊಳ್ಳುವ ಸಾಧ್ಯತೆ ಇದೆ ಎಂಬ ಚರ್ಚೆ ನಡೆಯುತ್ತಿದೆ.
ಈಗಾಗಲೇ ಅವರ ಬೆಂಬಲಿಗರು ನಿರಂತರವಾಗಿ ಸಂಪರ್ಕ ಸಾಧಿಸುತ್ತಿದ್ದು, ತಮ್ಮ ತಮ್ಮ ಕ್ಷೇತ್ರಗಳಿಂದ ಸ್ಪರ್ಧಿಸುವಂತೆ ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ. ಹೀಗಾಗಿ, ಅನುಭವಿ ರಾಜಕಾರಣಿ ಕಲಗೋಡು ರತ್ನಾಕರ್ ಅವರು ಯಾವ ಕ್ಷೇತ್ರದತ್ತ ಒಲವು ತೋರಲಿದ್ದಾರೆ? ಚುನಾವಣಾ ಕಣಕ್ಕೆ ಇಳಿಯುತ್ತಾರೆಯೇ? ಎಂಬ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ.
ಒಟ್ಟಿನಲ್ಲಿ, ಕರಡು ಮೀಸಲಾತಿಯು ಸ್ಥಳೀಯ ರಾಜಕೀಯ ಲೆಕ್ಕಾಚಾರಗಳಿಗೆ ಹೊಸ ತಿರುವು ನೀಡಿದ್ದು, ಕಲಗೋಡು ರತ್ನಾಕರ್ ಅವರ ಮುಂದಿನ ರಾಜಕೀಯ ನಡೆ ಏನಿರಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಬರಹ: Chetandas Hosamane









