
ಶಿವಮೊಗ್ಗ: ನಗರದ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹೆಚ್.ಎಂ. ಚಂದ್ರಶೇಖರಪ್ಪ (78) ಅವರು ಭಾನುವಾರ ಸಂಜೆ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.

ಕಳೆದ ಎರಡು ತಿಂಗಳಿನಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ಸಂಜೆ ಕೊನೆಯುಸಿರೆಳೆದಿದ್ದಾರೆ.
ಕೆ.ಎಸ್. ಈಶ್ವರಪ್ಪ ಅವರನ್ನು ಮಣಿಸಿದ್ದ ನಾಯಕ
1999ರ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗ ನಗರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಹೆಚ್.ಎಂ. ಚಂದ್ರಶೇಖರಪ್ಪ ಅವರು, ಪ್ರಬಲ ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಅವರನ್ನು ಸೋಲಿಸುವ ಮೂಲಕ ಶಾಸಕರಾಗಿ ಆಯ್ಕೆಯಾಗಿ ಭಾರಿ ಸದ್ದು ಮಾಡಿದ್ದರು. ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿ ಗುರುತಿಸಿಕೊಂಡಿದ್ದ ಇವರು, ಪಕ್ಷ ಹಾಗೂ ಸಮಾಜದ ಅನೇಕ ಪ್ರಮುಖ ಹುದ್ದೆಗಳನ್ನು ನಿಭಾಯಿಸಿದ್ದರು.
ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ, ಶಿವಮೊಗ್ಗ ನಗರಸಭೆ ಅಧ್ಯಕ್ಷರಾಗಿ ಅವರು ಸೇವೆ ಸಲ್ಲಿಸಿದ್ದರು. ಕೇವಲ ರಾಜಕೀಯ ಮಾತ್ರವಲ್ಲದೆ, ವೀರಶೈವ-ಲಿಂಗಾಯತ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾಗಿ ಹಾಗೂ ಮಾಜಿ ಶಾಸಕರ ವೇದಿಕೆಯ ರಾಜ್ಯ ಅಧ್ಯಕ್ಷರಾಗಿಯೂ ಅವರು ಸಮರ್ಥವಾಗಿ ಕಾರ್ಯನಿರ್ವಹಿಸಿದ್ದರು.
ಇಂದು ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆ
ಮೃತರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತರಲಾಗುತ್ತಿದ್ದು, ಜುಲೈ 27ರಂದು ಬೆಳಿಗ್ಗೆ 9:30ರಿಂದ ನಗರದ ಬಸವನಗುಡಿ ಮುಖ್ಯರಸ್ತೆಯಲ್ಲಿರುವ ಅವರ ಸ್ವಗೃಹದಲ್ಲಿ ಸಾರ್ವಜನಿಕರ ಮತ್ತು ಅಭಿಮಾನಿಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಅದೇ ದಿನ ಸಂಜೆ 4 ಗಂಟೆಗೆ ಹೊಸಳ್ಳಿಯಲ್ಲಿರುವ ಅವರ ತೋಟದಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರದ ವಿಧಿವಿಧಾನಗಳು ನೆರವೇರಲಿವೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಕಂಬನಿ ಮಿಡಿದ ಗಣ್ಯರು, ಮುಗಿಲುಮುಟ್ಟಿದ ಆಕ್ರಂದನ
ಹಿರಿಯ ನಾಯಕನ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬಸವನಗುಡಿಯಲ್ಲಿರುವ ಅವರ ನಿವಾಸದ ಬಳಿ ಅಪಾರ ಸಂಖ್ಯೆಯ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು, ಸ್ನೇಹಿತರು ಹಾಗೂ ಸಂಬಂಧಿಕರು ಜಮಾಯಿಸಿದ್ದು, ಶೋಕದ ವಾತಾವರಣ ನಿರ್ಮಾಣವಾಗಿದೆ.
ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ಅವರ ನಿಧನಕ್ಕೆ ಶಾಸಕರಾದ ಬೇಳೂರು ಗೋಪಾಲಕೃಷ್ಣ, ಶಾರದಾ ಪೂರ್ಯನಾಯ್ಕ್, ಮಾಜಿ ಸಚಿವ ಮಧು ಬಂಗಾರಪ್ಪ, ಜೆಡಿಎಸ್ ರಾಜ್ಯ ಕಾರ್ಯದರ್ಶಿ ಆರ್.ಎ. ಚಾಬುಸಾಬ್ ಕಂಬನಿ ಮಿಡಿದಿದ್ದಾರೆ. ಹಾಗೆಯೇ ಮುಖಂಡರಾದ ಕಲಗೋಡು ರತ್ನಾಕರ್, ಬಿ.ಪಿ. ರಾಮಚಂದ್ರ, ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಅಮೀರ್ ಹಂಜಾ, ಈಶ್ವರಪ್ಪಗೌಡ, ಆಸೀಫ್ ಭಾಷಾ, ಬಿ.ಜಿ. ಚಂದ್ರಮೌಳಿ ಸೇರಿದಂತೆ ವಿವಿಧ ರಾಜಕೀಯ, ಸಾಮಾಜಿಕ ಹಾಗೂ ಸಾರ್ವಜನಿಕ ವಲಯದ ಅನೇಕ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಬರಹ: Chetandas Hosamane









