ಹೊಸನಗರ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ: ಸಿಬ್ಬಂದಿಯ ಸಮಯಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿತು

Photo of author

By vishwachetana807@gmail.com

ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ವಿದ್ಯುತ್ ವೈಯರಿಂಗ್‌ನಲ್ಲಿ ಬೆಂಕಿ; ಸಿಬ್ಬಂದಿ ಅಭಿ ಫೈರ್ ಎಕ್ಸ್‌ಟಿಂಗ್ವಿಷರ್ ಬಳಸಿ ಬೆಂಕಿ ನಂದಿಸಿ ದುರಂತ ತಪ್ಪಿಸಿದರು

ಹೊಸನಗರ, ಆ.2: ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಸುಮಾರು 11 ಗಂಟೆ ವೇಳೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದ ಘಟನೆ ನಡೆದಿದೆ.

ಆಸ್ಪತ್ರೆಯ ವಿದ್ಯುತ್ ವೈಯರಿಂಗ್ ಹಾಗೂ ಸ್ವಿಚ್ ಬೋರ್ಡ್‌ಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಗೋಡೆಯ ಭಾಗವೂ ಸುಟ್ಟು ಕರಕಲಾಗಿತ್ತು. ಬೆಂಕಿಯಿಂದ ಆಸ್ಪತ್ರೆಯಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಈ ವೇಳೆ ಆಸ್ಪತ್ರೆಯ ಸಿಬ್ಬಂದಿ ಅಭಿ (ಹೊಸನಗರ) ಅವರು ಸಮಯಪ್ರಜ್ಞೆ ಪ್ರದರ್ಶಿಸಿ ಮೊದಲು ವಿದ್ಯುತ್ ಸಂಪರ್ಕವನ್ನು ಸ್ಥಗಿತಗೊಳಿಸಿದರು. ಬಳಿಕ ಯಾವುದೇ ಆತಂಕಕ್ಕೆ ಒಳಗಾಗದೆ ಫೈರ್ ಎಕ್ಸ್‌ಟಿಂಗ್ವಿಷರ್ ಬಳಸಿ ಬೆಂಕಿಯನ್ನು ಯಶಸ್ವಿಯಾಗಿ ನಂದಿಸಿದರು. ಅವರ ತಕ್ಷಣದ ಕಾರ್ಯಾಚರಣೆಯಿಂದ ಬೆಂಕಿ ಆಸ್ಪತ್ರೆಯ ಇತರೆ ವಿಭಾಗಗಳಿಗೆ ಹರಡದೇ ನಿಯಂತ್ರಣಕ್ಕೆ ಬಂದಿದ್ದು, ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ.

ಘಟನೆಯಲ್ಲಿ ವಿದ್ಯುತ್ ವೈಯರಿಂಗ್, ಸ್ವಿಚ್ ಬೋರ್ಡ್ ಹಾಗೂ ಕೆಲವು ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಅಥವಾ ರೋಗಿಗಳಿಗೆ ಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಗ್ನಿ ಅವಘಡದ ಸಂದರ್ಭದಲ್ಲಿ ಧೈರ್ಯ, ಸಮಯಪ್ರಜ್ಞೆ ಹಾಗೂ ಕರ್ತವ್ಯನಿಷ್ಠೆಯಿಂದ ಕಾರ್ಯನಿರ್ವಹಿಸಿ ಫೈರ್ ಎಕ್ಸ್‌ಟಿಂಗ್ವಿಷರ್ ಬಳಸಿ ಬೆಂಕಿಯನ್ನು ನಿಯಂತ್ರಿಸಿದ ಸಿಬ್ಬಂದಿ ಅಭಿ (ಹೊಸನಗರ) ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರ ಸಮಯೋಚಿತ ಕ್ರಮದಿಂದ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿದೆ ಎಂದು ಪ್ರಶಂಸಿಸಿದ್ದಾರೆ.

ಬರಹ: Chetandas Hosamane

Leave a Comment