ಕಿರಾಣಿ ಅಂಗಡಿ, ಹೋಟೆಲ್ಗಳಲ್ಲಿ ಅಕ್ರಮ ಮದ್ಯ ಮಾರಾಟ ಆರೋಪ; ಅಬಕಾರಿ–ಪೊಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರ ಒತ್ತಾಯ

ಹೊಸನಗರ: ನಿರಂತರ ದುಡಿಮೆಯಿಂದ ದಣಿದ ಕಾರ್ಮಿಕ ವರ್ಗದ ನಡುವೆ ಮದ್ಯಪಾನ ಹೆಚ್ಚುತ್ತಿರುವುದು ಕುಟುಂಬಗಳ ಆರ್ಥಿಕ ಹಾಗೂ ಸಾಮಾಜಿಕ ಬದುಕಿನ ಮೇಲೂ ಪರಿಣಾಮ ಬೀರುತ್ತಿದೆ. ಇದರ ಬೆನ್ನಲ್ಲೇ ತಾಲೂಕಿನ ಹಲವು ಗ್ರಾಮಗಳಲ್ಲಿ ಕಿರಾಣಿ ಅಂಗಡಿ, ಹೋಟೆಲ್ ಸೇರಿದಂತೆ ವಿವಿಧೆಡೆ ಅಕ್ರಮವಾಗಿ ಮದ್ಯ ಮಾರಾಟ ಹಾಗೂ ಸರಬರಾಜು ನಡೆಯುತ್ತಿದೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.


ಕೆಲವು ಗ್ರಾಮಗಳ ದಿನಸಿ ಅಂಗಡಿಗಳಿಗೆ ಮದ್ಯದಂಗಡಿ ಮಾಲೀಕರೇ ವ್ಯಕ್ತಿಗಳನ್ನು ನಿಯೋಜಿಸಿ ಅಕ್ರಮವಾಗಿ ಮದ್ಯ ಸರಬರಾಜು ಮಾಡುತ್ತಿದ್ದಾರೆ ಎನ್ನಲಾಗಿದ್ದು, ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಮದ್ಯ ಸುಲಭವಾಗಿ ಲಭ್ಯವಾಗುವಂತಾಗಿದೆ ಎಂಬುದು ಸಾರ್ವಜನಿಕರ ಆರೋಪವಾಗಿದೆ. ಅಕ್ರಮ ಮದ್ಯ ಮಾರಾಟದಿಂದ ಯುವಕರು ಹಾಗೂ ಕಾರ್ಮಿಕರು ಹೆಚ್ಚಿನ ಪ್ರಮಾಣದಲ್ಲಿ ಮದ್ಯದ ಚಟಕ್ಕೆ ಒಳಗಾಗುವ ಸಾಧ್ಯತೆ ಇದ್ದು, ಕುಟುಂಬಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.ಇದಲ್ಲದೆ, ಪ್ರತಿಷ್ಠಿತ ಕಂಪನಿಗಳ ಮದ್ಯದ ಬಾಟಲ್ಗಳಿಗೆ ಅಗ್ಗದ ಮದ್ಯವನ್ನು ಬೆರೆಸಿ ಮಾರಾಟ ಮಾಡುವ ದಂಧೆಯೂ ನಡೆಯುತ್ತಿದೆ ಎಂಬ ಆರೋಪಗಳು ಈ ಹಿಂದೆ ಕೇಳಿಬಂದಿದ್ದವು. ತಾಲೂಕಿನ ಹರಿದ್ರಾವತಿ, ಮಳವಳ್ಳಿ, ಬಟ್ಟೆಮಲ್ಲಪ್ಪ, ಸುತ್ತ, ವಾರಂಬಳ್ಳಿ, ಜಕ್ಕನಗದ್ದೆ, ಮುಂಬಾರು, ಹುಂಚ ರೋಡ್ ಸೇರಿದಂತೆ ವಿವಿಧೆಡೆ ಅಕ್ರಮ ಮದ್ಯ ಸಾಗಾಟ ಹಾಗೂ ಮಾರಾಟ ನಡೆಯುತ್ತಿದೆ ಎಂಬ ದೂರುಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ.ಮದ್ಯದಂಗಡಿಗಳಿಂದ ಬೈಕ್ಗಳ ಮೂಲಕ ವಿವಿಧ ಪ್ರದೇಶಗಳಿಗೆ ಅಕ್ರಮವಾಗಿ ಮದ್ಯ ಸರಬರಾಜು ಮಾಡಲಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದ್ದು, ಬೆಳಗ್ಗೆ 6–7 ಗಂಟೆಯಿಂದಲೇ ಕೆಲವು ಕಿರಾಣಿ ಅಂಗಡಿಗಳಲ್ಲಿ ಮದ್ಯ ಮಾರಾಟ ನಡೆಯುತ್ತಿದೆ ಎನ್ನಲಾಗಿದೆ.ಅಕ್ರಮ ಮದ್ಯ ಮಾರಾಟದ ಬಗ್ಗೆ ಅಬಕಾರಿ ಇಲಾಖೆಗೆ ಮಾಹಿತಿ ನೀಡಿದರೂ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂಬ ಅಸಮಾಧಾನವನ್ನು ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ. ದಾಳಿ ನಡೆಯುವ ಮುನ್ನವೇ ಮಾಹಿತಿ ಸೋರಿಕೆಯಾಗುತ್ತಿದೆ ಎಂಬ ಆರೋಪವೂ ಕೇಳಿಬಂದಿದ್ದು, ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳು ನಿಷ್ಪಕ್ಷಪಾತವಾಗಿ ಪರಿಶೀಲನೆ ನಡೆಸಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಗ್ರಾಮೀಣ ಪ್ರದೇಶಗಳಲ್ಲಿ ಅಕ್ರಮ ಮದ್ಯ ಮಾರಾಟ ಮತ್ತು ಸರಬರಾಜಿನಿಂದ ಸಾರ್ವಜನಿಕರ ಆರೋಗ್ಯ ಹಾಗೂ ಕುಟುಂಬಗಳ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಅಬಕಾರಿ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ ಪರಿಶೀಲನೆ ನಡೆಸಿ, ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕು. ತಪ್ಪಿತಸ್ಥರು ಕಂಡುಬಂದಲ್ಲಿ ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು ಎಂದು ತಾಲೂಕಿನ ಪ್ರಜ್ಞಾವಂತ ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಬರಹ: Chetandas Hosamane









