ಹೊಸನಗರ: ಪಟ್ಟಣದ ಚೌಡಮ್ಮ ರಸ್ತೆಯಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಕಳೂರು ಶ್ರೀ ರಾಮೇಶ್ವರ ಕೃಷಿ ಪತ್ತಿನ ಸಹಕಾರ ಸಂಘದ ಸುಸಜ್ಜಿತ ಕಟ್ಟಡದ ಲೋಕಾರ್ಪಣಾ ಸಮಾರಂಭದ ಅಂಗವಾಗಿ ಗುರುವಾರ ಧಾರ್ಮಿಕ ವಿಧಿವಿಧಾನಗಳು ಹಾಗೂ ವಿವಿಧ ಪೂಜಾ ಕೈಂಕರ್ಯಗಳು ಅದ್ಧೂರಿಯಾಗಿ ನೆರವೇರಿದವು.

ತಾಲೂಕಿನ ಪ್ರಸಿದ್ಧ ಮೂಲೆಗದ್ದೆ ಮಠದ ಶಿವಯೋಗಾಶ್ರಮದ ಪೀಠಾಧ್ಯಕ್ಷರಾದ ಪರಮಪೂಜ್ಯ ಶ್ರೀ ಶ್ರೀ ಚನ್ನಬಸವ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದರು. ನೂತನ ಕಟ್ಟಡದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ರಕ್ಷಾ ಹೋಮಕ್ಕೆ ಸ್ವಾಮೀಜಿಯವರು ಪೂರ್ಣಾಹುತಿ ಸಮರ್ಪಿಸಿ, ಸಂಘದ ಅಭಿವೃದ್ಧಿಗೆ ಶುಭ ಹಾರೈಸಿದರು.
ಗಣ್ಯರ ಸಮಾಗಮ:ಈ ಸಂದರ್ಭದಲ್ಲಿ ಜಿಲ್ಲಾ ಮಟ್ಟದ ಪ್ರಮುಖ ಸಹಕಾರಿ ಧುರೀಣರು ಉಪಸ್ಥಿತರಿದ್ದರು. ಶಿವಮೊಗ್ಗ ಜಿಲ್ಲಾ ಡಿಸಿಸಿ ಬ್ಯಾಂಕ್ ಹಾಗೂ ಮಲೆನಾಡು ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ. ಆರ್. ಎಂ. ಮಂಜುನಾಥ ಗೌಡ, ಶಿಮೂಲ್ (SHIMUL) ಅಧ್ಯಕ್ಷರಾದ ಗುರುಶಕ್ತಿ ವಿದ್ಯಾಧರ ಹಾಗೂ ಸಂಘದ ಅಧ್ಯಕ್ಷರಾದ ದುಮ್ಮ ವಿನಯ್ ಕುಮಾರ್ ಅವರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.


ಸಂಘದ ನೂತನ ಕಟ್ಟಡವು ಆಧುನಿಕ ಸೌಲಭ್ಯಗಳನ್ನು ಹೊಂದಿದ್ದು, ಸ್ಥಳೀಯ ಕೃಷಿಕರಿಗೆ ಹಾಗೂ ಗ್ರಾಹಕರಿಗೆ ಹೆಚ್ಚಿನ ಸೇವೆ ನೀಡಲು ಸಜ್ಜಾಗಿದೆ. ಕಾರ್ಯಕ್ರಮದಲ್ಲಿ ಸಂಘದ ನಿರ್ದೇಶಕ ಮಂಡಳಿ ಸದಸ್ಯರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಬರಹ: ತಂಡ, vishwachetana.com







