ಶಿವಮೊಗ್ಗ: ಸಾಗರದ ವಿಶ್ವಪ್ರಸಿದ್ಧ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ಮಂಗಳವಾರ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ.

ದೇವಸ್ಥಾನದಲ್ಲಿ ದೇವಿಯ ದರ್ಶನಕ್ಕಾಗಿ ಸಾಲಿನಲ್ಲಿ ನಿಂತಿದ್ದ ಸಂದರ್ಭದಲ್ಲಿ, ಭಾರಿ ಜನಸಂದಣಿ ಮತ್ತು ಉಷ್ಣತೆಯಿಂದಾಗಿ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದು, ಏಕಾಏಕಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳದಲ್ಲಿದ್ದ ಪೊಲೀಸರು ಹಾಗೂ ಕಾರ್ಯಕರ್ತರು ತಕ್ಷಣವೇ ನೆರವು ನೀಡಿ ಅವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ.


ಮಧುಮೇಹ ಹಾಗೂ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ ಕಾಗೋಡು ತಿಮ್ಮಪ್ಪ ಅವರಿಗೆ ದೇವಸ್ಥಾನದ ಒಳಭಾಗದಲ್ಲಿ ಆಮ್ಲಜನಕದ ಕೊರತೆ ಉಂಟಾಗಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.
ಕೂಡಲೇ ಅವರನ್ನು ಸಾಗರದ ಸರ್ಕಾರಿ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರಾದ ಡಾ. ವಿಕ್ರಂ ಅವರು ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿದ್ದಾರೆ.
“ಜನಸಂದಣಿಯಿಂದಾಗಿ ಉಸಿರಾಟದ ಸಮಸ್ಯೆ ಉಂಟಾಗಿತ್ತು. ಸದ್ಯ ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗಿದೆ. ರಕ್ತದೊತ್ತಡ ಮತ್ತು ಮಧುಮೇಹದ ಮಟ್ಟ ನಿಯಂತ್ರಣದಲ್ಲಿ ಇದೆ. ಅವರು ಚೇತರಿಸಿಕೊಳ್ಳುತ್ತಿದ್ದಾರೆ,” ಎಂದು ವೈದ್ಯರು ತಿಳಿಸಿದ್ದಾರೆ.
ಪ್ರಸ್ತುತ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಅಭಿಮಾನಿಗಳು ಹಾಗೂ ಕಾರ್ಯಕರ್ತರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಆಸ್ಪತ್ರೆಯ ಮೂಲಗಳು ಹಾಗೂ ಅವರ ಆಪ್ತರು ಮಾಹಿತಿ ನೀಡಿದ್ದಾರೆ.







