
ರಾಜ್ಯದ ಸರ್ಕಾರಿ ಶಾಲೆಗಳ ಸಬಲೀಕರಣ ಹಾಗೂ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದ್ದು, ಮುಂಬರುವ ಶೈಕ್ಷಣಿಕ ವರ್ಷದಿಂದ ರಾಜ್ಯಾದ್ಯಂತ ೧,೦೦೦ ನೂತನ ‘ಕರ್ನಾಟಕ ಪಬ್ಲಿಕ್ ಶಾಲೆ’ಗಳನ್ನು (ಕೆಪಿಎಸ್) ಆರಂಭಿಸಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಮುಂಬರುವ ಜೂನ್ ೧ರಂದು ಶಿವಮೊಗ್ಗದಲ್ಲಿ ನಡೆಯುವ ಬೃಹತ್ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ನೂತನ ಶಾಲೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಹೊಸ ಶೈಕ್ಷಣಿಕ ವರ್ಷದ ಸಿದ್ಧತೆಗಳ ಕುರಿತು ‘ಸಮಗ್ರ ಶಿಕ್ಷಣ ಕರ್ನಾಟಕ’ ಕಚೇರಿಯಿಂದ ಅಧಿಕಾರಿಗಳು, ಶಿಕ್ಷಕರು, ಪ್ರಾಂಶುಪಾಲರು ಹಾಗೂ ಎಸ್‌ಡಿಎಂಸಿ ಸದಸ್ಯರೊಂದಿಗೆ ಸಭೆ ನಡೆಸಿ ಸಮಗ್ರವಾಗಿ ಚರ್ಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ಬಾರಿ ಶೈಕ್ಷಣಿಕ ವರ್ಷದ ಆರಂಭವನ್ನು ‘ಮಕ್ಕಳ ಹಬ್ಬ’ದ ಮೂಲಕ ಅತ್ಯಂತ ಸಂಭ್ರಮದಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ. ಮೇ ೨೯ರಿಂದ ೩೧ರವರೆಗೆ ಎಲ್ಲಾ ಶಾಲಾ ಆವರಣಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ, ಜೂನ್ ೧ರಂದು ಶಾಲೆಗಳಿಗೆ ತಳಿರು ತೋರಣ ಕಟ್ಟಿ, ಸಮುದಾಯದ ಸಹಭಾಗಿತ್ವದಲ್ಲಿ ವಿಶೇಷ ಭೋಜನದ ವ್ಯವಸ್ಥೆ ಮಾಡುವ ಮೂಲಕ ಮಕ್ಕಳನ್ನು ಅಕ್ಷರ ದೇಗುಲಕ್ಕೆ ಸ್ವಾಗತಿಸಲಾಗುವುದು ಎಂದಿದ್ದಾರೆ. ಜೊತೆಗೆ, ನಮ್ಮ ಸರ್ಕಾರಿ ಶಾಲೆಗಳಲ್ಲಿ ಅತ್ಯುತ್ತಮ ಹಾಗೂ ನುರಿತ ಶಿಕ್ಷಕರಿದ್ದು, ಈ ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸಿ ದಾಖಲಾತಿ ಹೆಚ್ಚಿಸಲು ರಾಜ್ಯಾದ್ಯಂತ ವ್ಯಾಪಕ ಅಭಿಯಾನ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.

ಸರ್ಕಾರಿ ಶಾಲೆಗಳ ಅಭಿವೃದ್ಧಿ ಕೇವಲ ಸರ್ಕಾರದ ಜವಾಬ್ದಾರಿಯಷ್ಟೇ ಅಲ್ಲ, ಸಮಾಜದ ಪಾತ್ರವೂ ಪ್ರಮುಖವಾಗಿದೆ ಎಂದಿರುವ ಮಧು ಬಂಗಾರಪ್ಪ ಅವರು, ‘ನಮ್ಮ ಶಾಲೆ ನಮ್ಮ ಜವಾಬ್ದಾರಿ’ ಪರಿಕಲ್ಪನೆಯಡಿ ಕೈಜೋಡಿಸುವಂತೆ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ದಾನಿಗಳು, ಹಳೆಯ ವಿದ್ಯಾರ್ಥಿಗಳು ಹಾಗೂ ಉದ್ಯಮಿಗಳು ಮುಂದೆ ಬಂದು ಶಾಲೆಗಳಿಗೆ ಸ್ಮಾರ್ಟ್ ಟಿವಿ, ಶುದ್ಧ ಕುಡಿಯುವ ನೀರು ಹಾಗೂ ಶೌಚಾಲಯದಂತಹ ಅತ್ಯಗತ್ಯ ಮೂಲಸೌಕರ್ಯಗಳನ್ನು ಒದಗಿಸಲು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
ಮಕ್ಕಳ ಬೌದ್ಧಿಕ ಬೆಳವಣಿಗೆಯ ಜೊತೆಗೆ ಅವರ ಆರೋಗ್ಯಕ್ಕೂ ಸರ್ಕಾರ ಒತ್ತು ನೀಡಿದೆ. ಹೀಗಾಗಿ ಅಜೀಂ ಪ್ರೇಮ್‌ಜಿ ಫೌಂಡೇಶನ್ ನೆರವಿನೊಂದಿಗೆ ಪ್ರತಿದಿನ ಮಕ್ಕಳಿಗೆ ಮೊಟ್ಟೆ ಅಥವಾ ಬಾಳೆಹಣ್ಣು ವಿತರಿಸಲಾಗುತ್ತಿದೆ. ಅಲ್ಲದೆ, ವಿಶೇಷ ತರಗತಿಗಳ ಸುಗಮ ನಿರ್ವಹಣೆಗಾಗಿ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಒದಗಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. “ಶಿಕ್ಷಣ ಎಂಬುದು ಯಾರಿಂದಲೂ ಕದಿಯಲಾಗದ ಏಕೈಕ ಸಂಪತ್ತು. ಹೀಗಾಗಿ ನಮ್ಮ ಮಕ್ಕಳ ಉಜ್ವಲ ಭವಿಷ್ಯವನ್ನು ರೂಪಿಸುವ ಈ ಮಹತ್ಕಾರ್ಯದಲ್ಲಿ ಶಿಕ್ಷಕರು, ಪೋಷಕರು ಹಾಗೂ ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ” ಎಂದು ಸಚಿವ ಮಧು ಬಂಗಾರಪ್ಪ ಅವರು ನಾಡಿನ ಜನತೆಯಲ್ಲಿ ವಿನಂತಿಸಿದ್ದಾರೆ.
ಬರಹ: Chetandas Hosamane









