​ಹೊಸನಗರ:ಎಂ.ಗುಡ್ಡೆಕೊಪ್ಪ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ ವಿತರಣೆ

Photo of author

By vishwachetana807@gmail.com

ದಾನಿ ದಿನೇಶ್ ಕುಂಟಿಗೆ ಅವರ ಸಹಕಾರ – ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಣಕ್ಕೆ ಮತ್ತಷ್ಟು ಉತ್ತೇಜನ

 

ಹೊಸನಗರ, : ತಾಲೂಕಿನ ಎಂ.ಗುಡ್ಡೆಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಬ್ಯಾಗ್ ವಿತರಣಾ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು.

ಕಾರ್ಯಕ್ರಮಕ್ಕೆ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ವೀರೇಶ್ ಅವರು ಸ್ವಾಗತ ಕೋರಿದರು. ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಉತ್ತೇಜನ ನೀಡುವ ಉದ್ದೇಶದಿಂದ ದಾನಿ ಶ್ರೀ ದಿನೇಶ್ ಕುಂಟಿಗೆ ಅವರು ಶಾಲಾ ಮಕ್ಕಳಿಗೆ ಬ್ಯಾಗ್‌ಗಳನ್ನು ಕೊಡುಗೆಯಾಗಿ ನೀಡಿದ್ದು, ಅವರ ಅನುಪಸ್ಥಿತಿಯಲ್ಲಿ ಊರಿನ ಗಣ್ಯರು ಮಕ್ಕಳಿಗೆ ಬ್ಯಾಗ್‌ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ರಮೇಶ್ ನೇರಳೆ, “ವಿದ್ಯಾರ್ಥಿಗಳು ದಾನಿಗಳ ನೆರವನ್ನು ಸದುಪಯೋಗಪಡಿಸಿಕೊಂಡು ಶ್ರದ್ಧೆಯಿಂದ ವ್ಯಾಸಂಗ ಮಾಡಿ ಶಾಲೆ ಹಾಗೂ ಪೋಷಕರಿಗೆ ಕೀರ್ತಿ ತರಬೇಕು. ಮುಂದಿನ ದಿನಗಳಲ್ಲಿ ತಾವು ಕಲಿತ ಶಾಲೆ ಹಾಗೂ ಸಮಾಜಕ್ಕೆ ನೆರವಾಗುವ ಮನೋಭಾವ ಬೆಳೆಸಿಕೊಳ್ಳಬೇಕು” ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಹಾಗೂ ಹಳೆ ವಿದ್ಯಾರ್ಥಿ ಶ್ರೀ ಪ್ರವೀಣ್ ಜಿ.ಎನ್. ಮಾತನಾಡಿ, “ಶಾಲೆಯ ಸರ್ವತೋಮುಖ ಅಭಿವೃದ್ಧಿಗೆ ಹಳೆ ವಿದ್ಯಾರ್ಥಿ ಸಂಘ ನಿರಂತರವಾಗಿ ಶ್ರಮಿಸಲಿದೆ. ದಾನಿಗಳ ನೆರವಿನ ಜೊತೆಗೆ ಗ್ರಾಮ ಪಂಚಾಯತ್ ಹಾಗೂ ಸರ್ಕಾರದ ವಿವಿಧ ಯೋಜನೆಗಳನ್ನು ಶಾಲೆಗೆ ತಂದು ಸಮರ್ಪಕವಾಗಿ ಬಳಸಿಕೊಳ್ಳಲು ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಶ್ರೀ ಅಣ್ಣಪ್ಪ, ಗ್ರಾಮದ ಪ್ರಮುಖರಾದ ಶ್ರೀ ದಿವಾಕರ್, ಶ್ರೀ ರವೀಂದ್ರ, ಶ್ರೀ ಟಾಕಪ್ಪ, ಶ್ರೀ ನಿತ್ಯಾನಂದ, ಶಾಲೆಯ ಶಿಕ್ಷಕ ವೃಂದ, ಎಸ್‌ಡಿಎಂಸಿ ಸದಸ್ಯರು, ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದ ಕೊನೆಯಲ್ಲಿ ಮುಖ್ಯ ಶಿಕ್ಷಕರಾದ ಶ್ರೀ ವೀರೇಶ್ ಅವರು ಕಾರ್ಯಕ್ರಮ ಯಶಸ್ವಿಗೊಳಿಸಿದ ಗಣ್ಯರು, ಪೋಷಕರು ಹಾಗೂ ದಾನಿಗಳಿಗೆ ಶಾಲೆಯ ಪರವಾಗಿ ಕೃತಜ್ಞತೆ ಸಲ್ಲಿಸಿದರು.

ಬರಹ: Chetandas Hosamane

Leave a Comment