ಮೆಲಿನಬೆಸಿಗೆ ತಾಲೂಕು ಪಂಚಾಯತ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ

ಹೊಸನಗರ: ಮುಂಬರುವ ತಾಲೂಕು ಪಂಚಾಯತ್ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಹೊಸನಗರ ತಾಲೂಕಿನಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಕುರಿತು ರಾಜಕೀಯ ವಲಯದಲ್ಲಿ ಚರ್ಚೆಗಳು ಗರಿಗೆದರಿವೆ. ಈ ನಡುವೆ, ಮೇಲಿನಬೆಸಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಟೆಂಕಬೈಲು ನಿವಾಸಿ, ವಿದ್ಯಾವಂತೆ ಹಾಗೂ ದೀರ್ಘಕಾಲದಿಂದ ಸಾಮಾಜಿಕ, ರಾಜಕೀಯ ಮತ್ತು ಸಹಕಾರಿ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಶ್ರೀಮತಿ ಮೈತ್ರಾ ಅಶೋಕ್ ಅವರ ಹೆಸರು ಪ್ರಬಲ ಆಕಾಂಕ್ಷಿಯಾಗಿ ಮುನ್ನೆಲೆಗೆ ಬಂದಿದೆ.

ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸ್ಪಂದಿಸುವ ಗುಣ, ನೊಂದವರ ಸಂಕಷ್ಟಗಳಿಗೆ ಧ್ವನಿಯಾಗುವ ಛಾತಿ ಮತ್ತು ಮಹಿಳೆಯರಲ್ಲಿ ಆತ್ಮವಿಶ್ವಾಸ ತುಂಬುವ ಮೂಲಕ ಮೈತ್ರಾ ಅಶೋಕ್ ಅವರು ಸ್ಥಳೀಯ ಮಟ್ಟದಲ್ಲಿ ವಿಶೇಷ ಗುರುತು ಮೂಡಿಸಿದ್ದಾರೆ. ಸ್ಥಳೀಯ ಕಾರ್ಯಕರ್ತರು, ಮಹಿಳಾ ಸಂಘಟನೆಗಳು ಹಾಗೂ ಸಾರ್ವಜನಿಕ ವಲಯದಿಂದ ಅವರಿಗೆ ಈ ಬಾರಿ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂಬ ಬಲವಾದ ಒಲವು ವ್ಯಕ್ತವಾಗಿದೆ.

ಬಿ.ಎ. ಪದವೀಧರೆಯಾಗಿರುವ ಮೈತ್ರಾ ಅಶೋಕ್ ಅವರು, ಕಷ್ಟದಲ್ಲಿದ್ದ ಮಹಿಳೆಯರ ಆರ್ಥಿಕ ಹಾಗೂ ಕೌಟುಂಬಿಕ ಸಮಸ್ಯೆಗಳಿಗೆ ಸ್ಪಂದಿಸಿ, ಅವರು ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಲು ನಿರಂತರವಾಗಿ ಪ್ರೋತ್ಸಾಹಿಸುತ್ತಿದ್ದಾರೆ. ಮೆಲಿನಬೆಸಿಗೆ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷೆಯಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿರುವ ಇವರಿಗೆ, ಗ್ರಾಮೀಣ ಜನರ ಸಮಸ್ಯೆಗಳು ಹಾಗೂ ಸ್ಥಳೀಯ ಆಡಳಿತದ ಸ್ಪಷ್ಟ ಅರಿವಿದೆ.
ಹೊಸನಗರ ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆಯಾಗಿ 6 ವರ್ಷಗಳು ಹಾಗೂ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆಯಾಗಿ 5 ವರ್ಷಗಳ ಕಾಲ ಕಾರ್ಯನಿರ್ವಹಿಸಿರುವ ಇವರು, ಗ್ರಾಮೀಣ ಮಹಿಳೆಯರ ಸ್ವಾವಲಂಬನೆಗಾಗಿ ಮತ್ತು ಸ್ವಸಹಾಯ ಗುಂಪುಗಳ ಬಲವರ್ಧನೆಗಾಗಿ ಶ್ರಮಿಸಿದ್ದಾರೆ. ಇದರೊಂದಿಗೆ ಕೊಡಚಾದ್ರಿ ಡಿಗ್ರಿ ಕಾಲೇಜಿನ ಸಿ.ಡಿ.ಸಿ. (CDC) ಸದಸ್ಯೆಯಾಗಿ 5 ವರ್ಷಗಳ ಕಾಲ ಸೇವೆ ಸಲ್ಲಿಸುವ ಮೂಲಕ ವಿದ್ಯಾರ್ಥಿಗಳ ಹಿತಾಸಕ್ತಿ ಹಾಗೂ ಕಾಲೇಜಿನ ಅಭಿವೃದ್ಧಿಗೂ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.
ಚುನಾವಣೆಯ ಅಖಾಡದಲ್ಲಿ ಅಭ್ಯರ್ಥಿಯೊಬ್ಬರ ಜನಪರ ಕಾಳಜಿ, ಜನಸಂಪರ್ಕ ಮತ್ತು ಸಂಘಟನಾ ಬಲವೇ ಅತಿಮುಖ್ಯ. ಈ ಎಲ್ಲಾ ಅರ್ಹತೆಗಳನ್ನು ಹೊಂದಿರುವ ಮೈತ್ರಾ ಅಶೋಕ್ ಅವರಿಗೆ ಪಕ್ಷದ ವರಿಷ್ಠರು ಮನ್ನಣೆ ನೀಡಿ, ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅವಕಾಶ ಕಲ್ಪಿಸಬೇಕು ಎಂಬುದು ಅವರ ಅಭಿಮಾನಿಗಳು ಮತ್ತು ಬೆಂಬಲಿಗರ ಆಶಯವಾಗಿದೆ. ಮಹಿಳಾ ಸಬಲೀಕರಣ ಹಾಗೂ ಜನಪರ ಸೇವೆಯ ಮೂಲಕ ಜನಮನ ಗೆದ್ದಿರುವ ಮೈತ್ರಾ ಅಶೋಕ್ ಅವರಿಗೆ ಕಾಂಗ್ರೆಸ್ ಪಕ್ಷದಿಂದ ಅಧಿಕೃತ ಮನ್ನಣೆ ಸಿಗಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.
ಬರಹ: Chetandas Hosamane









