
ಸಾರ್ವಜನಿಕ ಸ್ಥಳಗಳಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಬೀದಿ ನಾಯಿಗಳ ಹಾವಳಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಬೀದಿ ನಾಯಿಗಳನ್ನು ಸಾರ್ವಜನಿಕ ಸ್ಥಳಗಳಿಂದ ತೆರವುಗೊಳಿಸುವ ಕುರಿತು ಈ ಹಿಂದೆ ನೀಡಿದ್ದ ಆದೇಶವನ್ನು ಬದಲಿಸಲು ಅತ್ಯುನ್ನತ ನ್ಯಾಯಾಲಯವು ಸ್ಪಷ್ಟವಾಗಿ ನಿರಾಕರಿಸಿದೆ.

ವಿಶೇಷವಾಗಿ ಮಕ್ಕಳು, ರೋಗಿಗಳು ಮತ್ತು ಪ್ರಯಾಣಿಕರು ಹೆಚ್ಚಾಗಿ ಓಡಾಡುವ ಸೂಕ್ಷ್ಮ ಪ್ರದೇಶಗಳಾದ ಶಾಲೆಗಳು, ಆಸ್ಪತ್ರೆಗಳು, ರೈಲ್ವೆ ನಿಲ್ದಾಣಗಳು ಹಾಗೂ ಬಸ್ ನಿಲ್ದಾಣಗಳ ಆವರಣದಲ್ಲಿ ಯಾವುದೇ ಕಾರಣಕ್ಕೂ ಬೀದಿ ನಾಯಿಗಳು ಇರಬಾರದು ಎಂದು ಸುಪ್ರೀಂ ಕೋರ್ಟ್ ಖಡಕ್ ಸೂಚನೆ ಕೊಟ್ಟಿದೆ.

ಕಣ್ಣುಮುಚ್ಚಿ ಕುಳಿತುಕೊಳ್ಳಲು ಸಾಧ್ಯವಿಲ್ಲ
ದೇಶದ ಹಲವೆಡೆ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು, ಅದರಲ್ಲೂ ಮುಖ್ಯವಾಗಿ ಸಣ್ಣ ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿರುವ ಮತ್ತು ತೀವ್ರವಾಗಿ ಗಾಯಗೊಳ್ಳುತ್ತಿರುವ ಘಟನೆಗಳು ಹೆಚ್ಚಾಗುತ್ತಿರುವುದಕ್ಕೆ ನ್ಯಾಯಪೀಠ ತೀವ್ರ ಕಳವಳ ವ್ಯಕ್ತಪಡಿಸಿದೆ. “ಬೀದಿ ನಾಯಿಗಳ ಹಾವಳಿ ಹಾಗೂ ಇದರಿಂದ ಸಾರ್ವಜನಿಕರಿಗೆ ಎದುರಾಗುತ್ತಿರುವ ಅಪಾಯದ ಬಗ್ಗೆ ಅಧಿಕಾರಿಗಳು ಕಣ್ಣುಮುಚ್ಚಿ ಕುಳಿತುಕೊಳ್ಳಲು ಸಾಧ್ಯವಿಲ್ಲ” ಎಂದು ನ್ಯಾಯಾಲಯವು ಕಠಿಣ ಶಬ್ದಗಳಲ್ಲಿ ಎಚ್ಚರಿಸಿದೆ.
ಭಯವಿಲ್ಲದ ಓಡಾಟ ಜನರ ಹಕ್ಕು
ಪ್ರತಿಯೊಬ್ಬ ನಾಗರಿಕನಿಗೂ ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಭಯವಿಲ್ಲದೆ ಸ್ವತಂತ್ರವಾಗಿ ಓಡಾಡುವ ಹಕ್ಕಿದೆ. ಬೀದಿ ನಾಯಿಗಳ ಭಯದಿಂದಾಗಿ ಜನರು ರಸ್ತೆಗಿಳಿಯಲು ಹಿಂಜರಿಯುವ ವಾತಾವರಣ ನಿರ್ಮಾಣವಾಗಬಾರದು. ಸಾರ್ವಜನಿಕರ ಸುರಕ್ಷತೆ ಮತ್ತು ನೆಮ್ಮದಿಯ ಜೀವನಕ್ಕೆ ಮೊದಲ ಆದ್ಯತೆ ನೀಡಬೇಕಿರುವುದು ಸ್ಥಳೀಯ ಸಂಸ್ಥೆಗಳು ಹಾಗೂ ಸರ್ಕಾರದ ಕರ್ತವ್ಯವಾಗಿದೆ ಎಂದು ನ್ಯಾಯಪೀಠ ಈ ಸಂದರ್ಭದಲ್ಲಿ ನೆನಪಿಸಿದೆ.
ಸ್ಥಳೀಯ ಸಂಸ್ಥೆಗಳು ಮತ್ತು ಮುನ್ಸಿಪಲ್ ಕಾರ್ಪೊರೇಷನ್‌ಗಳು ಸುಪ್ರೀಂ ಕೋರ್ಟ್‌ನ ಈ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ಪಾಲಿಸಬೇಕಾಗಿದ್ದು, ಸಾರ್ವಜನಿಕ ವಲಯದಲ್ಲಿ ಈ ಆದೇಶವು ಭಾರೀ ಸಂಚಲನ ಮೂಡಿಸಿದೆ.
ಬರಹ: Chetandas Hosamane









